ಧಾರ್ಮಿಕ ವಸ್ತ್ರ ಧರಿಸಿ ಬಂದರೆ ಪಿಯುಸಿ ಪರೀಕ್ಷೆಗೆ ನೋ ಎಂಟ್ರಿ : ಸಚಿವ ಬಿ.ಸಿ.ನಾಗೇಶ್
ಬೆಂಗಳೂರು – ಏಪ್ರಿಲ್ 22ರಿಂದ ಮೇ 18ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಯಾವುದೇ ಧಾರ್ಮಿಕ ವಸ್ತ್ರ ಧರಿಸಲು ಅವಕಾಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷೆಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದು ತಿಳಿಸಿದರು.
ಖಾಸಗಿ ಮತ್ತು ಪುನಾವರ್ತಿತ ಅಭ್ಯರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಿಲ್ಲ. ರಾಜ್ಯದ 5,241 ಕಾಲೇಜುಗಳ 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ. 6,00519 ಸಾಮಾನ್ಯ ವಿದ್ಯಾರ್ಥಿಗಳು, 61,808 ಪುನಾವರ್ತಿತ, 21,928 ಖಾಸಗಿ ವಿದ್ಯಾರ್ಥಿಗಳು, 3,46,396 ಬಾಲಕರು, 3,37,319 ಬಾಲಕಿಯರಿದ್ದಾರೆ.
1076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 83 ಕೇಂದ್ರಗಳಿದ್ದರೆ, ರಾಮನಗರ ಜಿಲ್ಲೆಯಲ್ಲಿ 13 ಪರೀಕ್ಷಾ ಕೇಂದ್ರಗಳಿವೆ. ಅತಿ ಹೆಚ್ಚು ವಿದ್ಯಾರ್ಥಿಗಳು ಬೆಂಗಳೂರು ದಕ್ಷಿಣ ಜಿಲ್ಲೆಯ 58,836 ವಿದ್ಯಾರ್ಥಿಗಳು ಹೆಚ್ಚಿದ್ದರೆ, ಕೊಡುಗಿನಲ್ಲಿ 6,048 ಅತಿ ಕಡಿಮೆ ವಿದ್ಯಾರ್ಥಿಗಳಿದ್ದಾರೆ. ಪ್ರಾಯೋಗಿಕ ಪರೀಕ್ಷೆಯನ್ನು 1030 ಕೇಂದ್ರಗಳಲ್ಲಿ ನಡೆಯಲಿದ್ದು, 2, 67,349 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರೊಂದಿಗೆ ಸಭೆ ನಡೆಸಿ ಪರೀಕ್ಷೆ ಪೂರ್ವ ಸಿದ್ದತೆಯ ಬಗ್ಗೆ ಸೂಚನೆ ನೀಡಲಾಗಿದೆ. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರೀಕ್ಷೆಗೆ ಸಂಬಂಧಿಸಿದ ಗೌಪ್ಯ ವಸ್ತುಗಳನ್ನು ಜಿಲ್ಲಾ ಖಜಾನೆಗಳಲ್ಲಿ ಇಡುವ, ಖಜಾನೆಯ ಒಳಗೆ ಮತ್ತು ಹೊರಗೆ ನಡೆಯುವ ಚಟುವಟಿಕೆಗಳನ್ನು 24×7 ಸಿಸಿಟಿವಿ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅೀಧಿಕ್ಷಕರಿಗೆ ಮಾತ್ರ ಕ್ಯಾಮೇರಾವಿಲ್ಲದ ಬೇಸಿಕ್‍ಸೆಟ್ ಮೊಬೈಲ್ ಬಳಕೆಗೆ ಅನುಮತಿ ನೀಡಲಾಗಿದೆ. ಉಳಿದೆಲ್ಲ ಮೊಬೈಲ್ ತರುವುದು ಬಳಸುವುದು ಎರಡನ್ನೂ ನಿಷೇದಿಸಲಾಗಿದೆ.